Site icon NBTV Kannada

ವೆಂಕಟಾಪುರ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ಸರಳ ಸಂಭ್ರಮ – ನೂತನ ಎಸ್‌ಡಿಎಂಸಿ ಅಧ್ಯಕ್ಷರಿಗೆ ಸನ್ಮಾನ

ಮೊಳಕಾಲ್ಮೂರು: ತಾಲೂಕಿನ ವೆಂಕಟಾಪುರ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸರಳ ರೀತಿಯ ಸಂಭ್ರಮ ಆಚರಿಸಲಾಯಿತು. ಶಾಲಾ ಆವರಣವನ್ನು ತ್ರಿವರ್ಣ ಧ್ವಜಗಳು ಹಾಗೂ ಅಲಂಕಾರಿಕ ತೋರಣಗಳಿಂದ ಸಿದ್ದಪಡಿಸಿದ್ದು. ವಿದ್ಯಾರ್ಥಿಗಳು, ಶಿಕ್ಷಕರು, ಪಾಲಕರು ಹಾಗೂ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಭಾಗವಹಿಸಿದರು.

ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ. ರಾಷ್ಟ್ರಗೀತೆ ಗಾಯನದೊಂದಿಗೆ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳನ್ನು ಸ್ಮರಿಸಸಿದ. ಬಳಿಕ ನೂತನವಾಗಿ ಆಯ್ಕೆಯಾಗಿರುವ ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (ಎಸ್‌ಡಿಎಂಸಿ) ಅಧ್ಯಕ್ಷ ಆಟೋ ಬಸವರಾಜ್ ಅವರನ್ನು ಗ್ರಾಮದ ಮುಖಂಡರು ಹಾಗೂ ಶಾಲಾ ಸಿಬ್ಬಂದಿ ವರ್ಗ ಆತ್ಮೀಯವಾಗಿ ಬರಮಾಡಿಕೊಂಡು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಅಭಿವೃದ್ಧಿಗೆ ಮಹತ್ವದ ಕೊಡುಗೆಗಳು ಲಭಿಸಿದವು. ವೆಂಕಟಾಪುರ ಗ್ರಾಮ ಮುಖಂಡರಾದ ಸೀನಪ್ಪ ರವರಿಂದ ಶಾಲೆಯ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ವೆಂಕಟಾಪುರ ಎಜುಕೇಶನ್ ಟ್ರಸ್ಟ್ ವತಿಯಿಂದ ಶಾಲಾ ಕಾರ್ಯಕ್ರಮಗಳ ನಿರ್ವಹಣೆಗೆ ಅಗತ್ಯವಿರುವ ಪೋಡಿಯಂ (ವೇದಿಕೆ ಉಪನ್ಯಾಸಕ ಸ್ಟ್ಯಾಂಡ್) ಅನ್ನು ಕೊಡುಗೆಯಾಗಿ ನೀಡಲಾಯಿತು. ಟ್ರಸ್ಟ್‌ನ ಈ ಸಾಮಾಜಿಕ ಕಳಕಳಿಯ ಕಾರ್ಯಕ್ಕೆ ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಂದ ದೇಶಭಕ್ತಿ ಗೀತೆಗಳು, ಸಮೂಹ ನೃತ್ಯಗಳು, ಭಾಷಣಗಳು ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ವಿದ್ಯಾರ್ಥಿಗಳು ಸ್ವಾತಂತ್ರ್ಯ ಹೋರಾಟಗಾರರ ಪಾತ್ರ, ದೇಶಪ್ರೇಮ ಹಾಗೂ ರಾಷ್ಟ್ರೀಯ ಏಕತೆಯ ಸಂದೇಶ ಸಾರುವ ಪ್ರದರ್ಶನಗಳನ್ನು ನೀಡುವ ಮೂಲಕ ನೆರೆದಿದ್ದವರ ಮೆಚ್ಚುಗೆಗೆ ಪಾತ್ರರಾದರು.

ಈ ಸಂದರ್ಭದಲ್ಲಿ ಮಾತನಾಡಿದ ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ್ ಅವರು, “ಪ್ರಸ್ತುತ ಶಾಲೆಯಲ್ಲಿ ಎಲ್‌ಕೆಜಿ, ಯುಕೆಜಿ ಸೇರಿದಂತೆ ಎಂಟನೇ ತರಗತಿವರೆಗೆ ಶಿಕ್ಷಣ ವ್ಯವಸ್ಥೆ ಇದೆ. ಮುಂದಿನ ದಿನಗಳಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ತರಗತಿಗಳು ಆರಂಭವಾದರೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ. ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಮತ್ತು ಸಾರ್ವಜನಿಕರು ಕೈಜೋಡಿಸಬೇಕು” ಎಂದು ಅಭಿಪ್ರಾಯಪಟ್ಟರು.

ನೂತನ ಎಸ್‌ಡಿಎಂಸಿ ಅಧ್ಯಕ್ಷ ಆಟೋ ಬಸವರಾಜ್ ಮಾತನಾಡಿ, ಶಾಲೆಯ ಶೈಕ್ಷಣಿಕ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಶಿಕ್ಷಕರು, ಪಾಲಕರು ಹಾಗೂ ಗ್ರಾಮಸ್ಥರ ಸಹಕಾರದೊಂದಿಗೆ ಶಾಲೆಯನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.

ಗ್ರಾಮದ ಹಿರಿಯರು ಹಾಗೂ ಮುಖಂಡರು ಮಾತನಾಡಿ, ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅಗತ್ಯವಾಗಿದೆ. ವೆಂಕಟಾಪುರ ಎಜುಕೇಶನ್ ಟ್ರಸ್ಟ್ ನೀಡಿರುವ ಶುದ್ಧ ಕುಡಿಯುವ ನೀರಿನ ಘಟಕ ಮತ್ತು ಪೋಡಿಯಂ ವಿದ್ಯಾರ್ಥಿಗಳ ಹಾಗೂ ಶಾಲೆಯ ಕಾರ್ಯಚಟುವಟಿಕೆಗಳಿಗೆ ನೆರವಾಗಲಿದ್ದು, ಇಂತಹ ದಾನಿಗಳ ಕಾರ್ಯಗಳು ಇತರರಿಗೂ ಮಾದರಿಯಾಗಿವೆ ಎಂದು ಶ್ಲಾಘಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕ ಎರ್ರಿಸ್ವಾಮಿ, ಎಸ್ ಡಿ ಎಂ ಸಿ ಅಧ್ಯಕ್ಷರಾದ ಆಟೋ ಬಸವರಾಜ್, ಊರಿನ ಮುಖಂಡರಾದ ನರೇಂದ್ರಬಾಬು, ಮಾಜಿ ಎಸ್ ಡಿ ಎಂ ಸಿ ಅಧ್ಯಕ್ಷ ಮಲ್ಲಿಕಾರ್ಜುನ,ಜಿ ಎಸ್ ಎಸ್ ಆರ್ ಸೋಮಣ್ಣ, ಚೆನ್ನಪ್ಪ, ಶಿವಶರಣಪ್ಪ, ಸೀನಪ್ಪ,ಅಟ್ಟೆದ್ ಮಲ್ಲಿಕಾರ್ಜುನ, ಜಿಬಿ ಭೀಮರೆಡ್ಡಿ, ಎಚ್ ಟಿ ಹೊನ್ನಾರೆಡ್ಡಿ, ಹನುಮಣ್ಣ, ರುದ್ರಪ್ಪ,ಸೀತಾರಾಮ ಚಾರಿ,ಯುವ ಮುಖಂಡರಾದ ಲಿಂಗಾರೆಡ್ಡಿ, ಆಟೋ ಮಂಜುನಾಥ,ತಿರುಮಲ ಸುರೇಶ್,ಪ್ರಕಾಶ್,ಶಿಕ್ಷಕರಾದ ಗೋಪಾಲ, ಶಿವಕುಮಾರ್, ಅತಿಥಿ ಶಿಕ್ಷಕರುಗಳಾದ ಉಮೇಶ್ ಎಸ್, ಮನೋಹರ ವೈ, ಶೃತಿ,ಶಿಲ್ಪ, ಶ್ವೇತಾ, ಮಹಾದೇವಿಹಾಗೂ ಎಸ್‌ಡಿಎಂಸಿ ಸದಸ್ಯರು,ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಪಾಲಕರು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದರು.

Exit mobile version