Breaking
Sat. Sep 5th, 2026

ಅಶ್ವಿನಿ ಕುಟುಂಬಕ್ಕೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯ ಭರವಸೆ

ಸಿರವಾರ: ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ ಇತ್ತೀಚೆಗೆ ನಡೆದ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಸಂತ್ರಸ್ತೆ ಕುಮಾರಿ ಅಶ್ವಿನಿ ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದ ಸಚಿವರು, ಪ್ರಕರಣದ ಕುರಿತು ಅವರ ಅಹವಾಲುಗಳನ್ನು ಆಲಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಶ್ವಿನಿ ಪ್ರಕರಣ ಸೇರಿದಂತೆ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದಿರುವ ಕೊಲೆ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿಸಿದರು.

“ಅಪರಾಧ ಎಸಗಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾದವರಿಗೆ ಕಾನೂನಿನ ಅಡಿಯಲ್ಲಿ ಕಠಿಣ ಶಿಕ್ಷೆಯಾಗಬೇಕು,” ಎಂದು ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು.

ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಹಾಗೂ ಗೃಹ ಸಚಿವರ ಮೇಲೆ ಸಮಾಜದ ಪರವಾಗಿ ಮತ್ತು ವೈಯಕ್ತಿಕವಾಗಿ ಒತ್ತಡ ಹೇರುವುದಾಗಿ ಅವರು ಭರವಸೆ ನೀಡಿದರು.

“ನೊಂದ ಕುಟುಂಬಗಳಿಗೆ ಸರ್ಕಾರದಿಂದ ದೊರೆಯಬೇಕಾದ ಎಲ್ಲ ರೀತಿಯ ಪರಿಹಾರ ಹಾಗೂ ಅಗತ್ಯ ಸೌಲಭ್ಯಗಳನ್ನು ಶೀಘ್ರವಾಗಿ ತಲುಪಿಸುವಂತೆ ಕ್ರಮ ಕೈಗೊಳ್ಳಲಾಗುವುದು,” ಎಂದು ಸಚಿವರು ಹೇಳಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಗಪೂರ್ ಸಾಬ್, ಕೆ. ಶಾಂತಪ್ಪ, ರುದ್ರಪ್ಪ ಅಂಗಡಿ, ಜಯಣ್ಣ, ನರಸಿಂಹಲು ಮಾಡಿಗಿರಿ, ಎ. ಬಾಲಸ್ವಾಮಿ ಕೊಡ್ಲಿ, ಬಾಗಲವಾಡ ತಿಪ್ಪಣ್ಣ ವಕೀಲರು, ಅಬ್ರಹಾಂ ಹೊನ್ನಟ್ಟಿ, ದಲಿತ ಮುಖಂಡರಾದ ಅಂಬಣ್ಣ ಅರಹೋಳಿಕರ್ ಸೇರಿದಂತೆ ಹಲವು ಗ್ರಾಮಸ್ಥರು ಉಪಸ್ಥಿತರಿದ್ದರು.

Related Post

Leave a Reply

Your email address will not be published. Required fields are marked *