Breaking
Wed. Sep 9th, 2026

ವೇದಮೂರ್ತಿ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ:ಸುರೇಶ್ ಅನುವಾಳು

ಕಾಣದ ಕೈಗಳ ಬಗ್ಗೆಯೂ ತನಿಖೆ ನಡೆಸಲು ಮನವಿ

ಮಂಡ್ಯ: ಸಾಮಾಜಿಕ ಜಾಲತಾಣದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಕುರಿತು ಅಸಂಬದ್ಧ ಹಾಗೂ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎನ್ನಲಾದ ವೇದಮೂರ್ತಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಅಲ್ಲದೆ, ಅವರ ಹಿಂದೆ ಯಾರಾದರೂ ಪ್ರೇರಣೆ ಅಥವಾ ಬೆಂಬಲ ನೀಡಿದ್ದರೆ ಅಂತಹ ವ್ಯಕ್ತಿಗಳ ಬಗ್ಗೆಯೂ ತನಿಖೆ ನಡೆಸಬೇಕು ಎಂದು ಛಲವಾದಿ ಮಹಾಸಭಾ ಜಿಲ್ಲಾ ಸಮಿತಿ ಆಗ್ರಹಿಸಿದೆ.

ನಗರದ ಪ್ರವಾಸಿ ಮಂದಿರದಲ್ಲಿ ಛಲವಾದಿ ಮಹಾಸಭಾ ಜಿಲ್ಲಾ ಸಮಿತಿ ವತಿಯಿಂದ ಛಲವಾದಿ ಮುಖಂಡರ ಸಭೆ ನಡೆಯಿತು. ಸಭೆಯ ಬಳಿಕ ಮುಖಂಡರು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ಅವರನ್ನು ಭೇಟಿ ಮಾಡಿ, ವೇದಮೂರ್ತಿ ಪ್ರಕರಣದಲ್ಲಿ ಪೊಲೀಸರು ಕೈಗೊಂಡಿರುವ ಕಾನೂನು ಕ್ರಮಗಳ ಕುರಿತು ಚರ್ಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಛಲವಾದಿ ಮಹಾಸಭಾ ಜಿಲ್ಲಾಧ್ಯಕ್ಷ ಸುರೇಶ್ ಆನವಾಳು, ಅಂಬೇಡ್ಕರ್ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹೇಳಿಕೆಗಳನ್ನು ನೀಡಿರುವ ಆರೋಪದ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. ಆರೋಪಿಯನ್ನು ವೈದ್ಯಕೀಯ ಹಾಗೂ ಕಾನೂನುಬದ್ಧವಾಗಿ ಸಾಧ್ಯವಿರುವ ಪರೀಕ್ಷೆಗಳಿಗೆ ಒಳಪಡಿಸಿ, ಪ್ರಕರಣದ ಹಿಂದೆ ಯಾವುದೇ ವ್ಯಕ್ತಿಗಳು ಅಥವಾ ಸಂಘಟನೆಗಳ ಪಾತ್ರವಿದ್ದರೆ ಅದನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಮನವಿ ಮಾಡಿದರು.

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಗೌರವಕ್ಕೆ ಧಕ್ಕೆ ತರುವಂತಹ ಹೇಳಿಕೆಗಳು ಸಮಾಜದಲ್ಲಿ ಅಶಾಂತಿ ಉಂಟುಮಾಡುವ ಸಾಧ್ಯತೆ ಇರುವುದರಿಂದ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಮುಖಂಡರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಹರೀಶ್ ಕುಮಾರ್, ರಾಜ್ಯ ನಿರ್ದೇಶಕ ಪ್ರೇಮ್ ಕುಮಾರ್, ಉಸ್ತುವಾರಿ ಸಮಿತಿಯ ಜಯರಾಮ್ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related Post

Leave a Reply

Your email address will not be published. Required fields are marked *