Breaking
Tue. Oct 13th, 2026

ಪ್ಲಾಸ್ಟಿಕ್ ತ್ಯಾಜ್ಯ ಮುಕ್ತ ಕರ್ನಾಟಕಕ್ಕೆ ರಾಜ್ಯಾದ್ಯಂತ ವಿಶೇಷ ಅಭಿಯಾನಕ್ಕೆ ಗೋಪಿನಾಥ್ ಕರವಿ ಆಗ್ರಹ

ಕೋಲಾರ(ಅ.13): ಕರ್ನಾಟಕವನ್ನು ಪ್ಲಾಸ್ಟಿಕ್ ತ್ಯಾಜ್ಯ ಮುಕ್ತ ರಾಜ್ಯವನ್ನಾಗಿ ರೂಪಿಸಲು ರಾಜ್ಯ ಸರ್ಕಾರ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಬೇಕು ಎಂದು ಕೋಲಾರ ಜಿಲ್ಲೆಯ ಗ್ರಾಮ ಬೆಳಕು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಗೋಪಿನಾಥ್ ಕರವಿ ಅವರು ಮನವಿ ಮಾಡಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿರುವ ಅವರು, ಪರಿಸರ ಸಂರಕ್ಷಣೆ, ಗ್ರಾಮೀಣ ಅಭಿವೃದ್ಧಿ ಮತ್ತು ಯುವಜನರ ಸಬಲೀಕರಣಕ್ಕೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯದ ಅಭಿವೃದ್ಧಿ ಹಾಗೂ ಜನರ ಕಲ್ಯಾಣದ ದೃಷ್ಟಿಯಿಂದ ಸರ್ಕಾರ ಕೈಗೊಂಡಿರುವ ವಿವಿಧ ಕಾರ್ಯಕ್ರಮಗಳನ್ನು ಪತ್ರದಲ್ಲಿ ಶ್ಲಾಘಿಸಿರುವ ಗೋಪಿನಾಥ್ ಕರವಿ, ಪ್ಲಾಸ್ಟಿಕ್ ತ್ಯಾಜ್ಯದ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿರುವ ಹಿನ್ನೆಲೆಯಲ್ಲಿ ಪರಿಣಾಮಕಾರಿ ಕ್ರಮಗಳ ಅಗತ್ಯವನ್ನು ಒತ್ತಿಹೇಳಿದ್ದಾರೆ.

ರಾಜ್ಯದ ನಗರ, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಎಲ್ಲೆಂದರಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಕಂಡುಬರುತ್ತಿದ್ದು, ಇದರಿಂದ ಪರಿಸರ, ಜಲಮೂಲಗಳು, ಕೃಷಿಭೂಮಿ ಮತ್ತು ಸಾರ್ವಜನಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಆತಂಕವಿದೆ. ಹೀಗಾಗಿ ಪ್ಲಾಸ್ಟಿಕ್ ತ್ಯಾಜ್ಯದ ಸಮರ್ಪಕ ಸಂಗ್ರಹಣೆ, ವಿಂಗಡಣೆ ಮತ್ತು ವೈಜ್ಞಾನಿಕ ವಿಲೇವಾರಿಗೆ ಸರ್ಕಾರ ಆದ್ಯತೆ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಗ್ರಾಮ ಪಂಚಾಯಿತಿಗಳಿಂದ ಹಿಡಿದು ಮಹಾನಗರ ಪಾಲಿಕೆಗಳವರೆಗೆ ಸ್ಥಳೀಯ ಸಂಸ್ಥೆಗಳ ಮೂಲಕ ಪರಿಣಾಮಕಾರಿ ತ್ಯಾಜ್ಯ ನಿರ್ವಹಣಾ ವ್ಯವಸ್ಥೆ ಜಾರಿಗೊಳಿಸಬೇಕು. ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಯುವಜನರು ಹಾಗೂ ಸಾರ್ವಜನಿಕರನ್ನು ಒಳಗೊಂಡಂತೆ ರಾಜ್ಯಾದ್ಯಂತ ಪರಿಸರ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಎಸೆಯುವುದನ್ನು ತಡೆಯಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಮುಖ್ಯಮಂತ್ರಿಗಳು ಮಾಧ್ಯಮಗಳ ಮೂಲಕ ರಾಜ್ಯದ ಜನತೆಗೆ ಸ್ಪಷ್ಟ ಸಂದೇಶ ನೀಡಿದರೆ, ಪರಿಸರ ಸಂರಕ್ಷಣೆಯ ಕುರಿತು ಜನಜಾಗೃತಿ ಹೆಚ್ಚುವುದರ ಜೊತೆಗೆ ಪ್ಲಾಸ್ಟಿಕ್ ತ್ಯಾಜ್ಯ ಮುಕ್ತ ಕರ್ನಾಟಕದ ಅಭಿಯಾನಕ್ಕೆ ವೇಗ ದೊರೆಯಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

‘ಗ್ರಾಮದ ಕನಸು’ ಪುಸ್ತಕದ ಮೂಲಕ ಗ್ರಾಮಾಭಿವೃದ್ಧಿಯ ಆಶಯಗಳನ್ನು ಪ್ರತಿಪಾದಿಸಿರುವ ಗೋಪಿನಾಥ್ ಕರವಿ, ಗ್ರಾಮ ಬೆಳಕು ಸಂಸ್ಥೆಯ ಮೂಲಕ ಸಮಗ್ರ ಗ್ರಾಮೀಣ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ.

Related Post

Leave a Reply

Your email address will not be published. Required fields are marked *