Breaking
Sun. Aug 30th, 2026

ಮಾನವಿ ತಹಸೀಲ್ದಾರ್ ಕಚೇರಿಯಲ್ಲಿ ಮೂಲಸೌಕರ್ಯ ಕೊರತೆ: ಸಾರ್ವಜನಿಕರ ಪರದಾಟ

ಮಾನವಿ: ತಾಲೂಕು ತಹಸೀಲ್ದಾರ್ ಹಾಗೂ ತಾಲೂಕು ಕಾರ್ಯಾಂಗ ದಂಡಾಧಿಕಾರಿಗಳ ಕಚೇರಿಯಲ್ಲಿ ಮೂಲಸೌಕರ್ಯಗಳ ಕೊರತೆಯಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ತಾಲೂಕಿನ ವಿವಿಧ ಗ್ರಾಮಗಳಿಂದ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು ತಮ್ಮ ಸರ್ಕಾರಿ ಕೆಲಸಗಳಿಗಾಗಿ ತಹಸೀಲ್ದಾರ್ ಕಚೇರಿಗೆ ಆಗಮಿಸುತ್ತಾರೆ. ಇವರಲ್ಲಿ ವೃದ್ಧರು, ಮಹಿಳೆಯರು, ವಿದ್ಯಾರ್ಥಿಗಳು ಹಾಗೂ ಅನಾರೋಗ್ಯದಿಂದ ಬಳಲುತ್ತಿರುವವರೂ ಇದ್ದಾರೆ. ಆದರೆ ಕಚೇರಿ ಆವರಣದಲ್ಲಿ ಸಮರ್ಪಕ ಕುಡಿಯುವ ನೀರು, ಶೌಚಾಲಯ ಹಾಗೂ ಕುಳಿತುಕೊಳ್ಳಲು ಸೂಕ್ತ ಆಸನಗಳ ವ್ಯವಸ್ಥೆ ಇಲ್ಲದಿರುವುದರಿಂದ ಜನರು ಮೂಲಭೂತ ಸೌಕರ್ಯಗಳ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ.

ವಿಶೇಷವಾಗಿ ಮಹಿಳೆಯರು ಮತ್ತು ವಯೋವೃದ್ಧರಿಗೆ ಶೌಚಾಲಯದ ಕೊರತೆ ಹೆಚ್ಚಿನ ತೊಂದರೆ ಉಂಟುಮಾಡುತ್ತಿದೆ. ಕಚೇರಿಯಲ್ಲಿರುವ ಸಾರ್ವಜನಿಕರ ಆಸನಗಳು ಮುರಿದುಬಿದ್ದಿದ್ದು, ಗಂಟೆಗಟ್ಟಲೆ ಕಾಯಬೇಕಾದ ಸಂದರ್ಭಗಳಲ್ಲಿ ಅನೇಕರು ನೆಲದ ಮೇಲೆ ಕುಳಿತುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎನ್ನಲಾಗಿದೆ.

ಈ ಕುರಿತು ಸಾರ್ವಜನಿಕರು ಹಾಗೂ ಸ್ಥಳೀಯರ ನಿಯೋಗ ತಹಸೀಲ್ದಾರ್ ಭೀಮರಾಯ ರಾಮಸಮುದ್ರ ಅವರ ಗಮನಕ್ಕೆ ಸಮಸ್ಯೆಯನ್ನು ತಂದಿದ್ದಾರೆ. ಈ ವೇಳೆ ಹೊಸ ತಹಸೀಲ್ದಾರ್ ಕಚೇರಿ ಕಟ್ಟಡ ನಿರ್ಮಾಣವಾಗುತ್ತಿದ್ದು, ಅಗತ್ಯ ವ್ಯವಸ್ಥೆಗಳನ್ನು ಹೊಸ ಕಟ್ಟಡದಲ್ಲೇ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ ಎನ್ನಲಾಗಿದೆ.

ಆದರೆ, ಹೊಸ ಕಟ್ಟಡ ಪೂರ್ಣಗೊಳ್ಳಲು ಇನ್ನೂ ಸಮಯ ಬೇಕಾಗಿರುವುದರಿಂದ ಅಲ್ಲಿಯವರೆಗೆ ಸಾರ್ವಜನಿಕರ ಅನುಕೂಲಕ್ಕಾಗಿ ಕನಿಷ್ಠ ಮೂಲಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

“ದೂರದ ಊರುಗಳಿಂದ ಕೆಲಸಕ್ಕಾಗಿ ಬರುವ ವೃದ್ಧರು ಮತ್ತು ಅನಾರೋಗ್ಯ ಪೀಡಿತರು ಗಂಟೆಗಟ್ಟಲೆ ಕಾಯಬೇಕಾಗುತ್ತದೆ. ಶೌಚಾಲಯ, ಕುಡಿಯುವ ನೀರು ಹಾಗೂ ಕುಳಿತುಕೊಳ್ಳಲು ವ್ಯವಸ್ಥೆ ಇಲ್ಲದಿರುವುದು ಬೇಸರದ ಸಂಗತಿ” ಎಂದು ಕಚೇರಿಗೆ ಆಗಮಿಸಿದ್ದ ವ್ಯಕ್ತಿಯೊಬ್ಬರು ಅಸಮಾಧಾನ ವ್ಯಕ್ತಪಡಿಸಿದರು.

ಹೊಸ ಕಟ್ಟಡ ಪೂರ್ಣಗೊಳ್ಳುವವರೆಗೆ ತಾತ್ಕಾಲಿಕ ಶೌಚಾಲಯ, ಶುದ್ಧ ಕುಡಿಯುವ ನೀರು ಹಾಗೂ ಸುಸಜ್ಜಿತ ಆಸನಗಳ ವ್ಯವಸ್ಥೆ ಕಲ್ಪಿಸಬೇಕು. ಸಂಬಂಧಪಟ್ಟ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಕಚೇರಿಗೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿ, ಸಾರ್ವಜನಿಕರ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Related Post

Leave a Reply

Your email address will not be published. Required fields are marked *