Breaking
Tue. Oct 13th, 2026

ಪಾವಗಡದಲ್ಲಿ 5 ಗ್ರಾಮ ಪಂಚಾಯಿತಿ, 2 ಜಿಲ್ಲಾ ಪಂಚಾಯಿತಿ ಸ್ಥಾನ ಗೆಲ್ಲುವ ವಿಶ್ವಾಸ: ಸುಧಾಕರ್ ಡಿ.ಎನ್.

ಪಾವಗಡ: ಮುಂಬರುವ ಗ್ರಾಮ ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಬಹುಜನ ಸಮಾಜ ಪಾರ್ಟಿ (ಬಿಎಸ್‌ಪಿ) ಪಾವಗಡ ತಾಲೂಕಿನಲ್ಲಿ ಉತ್ತಮ ಸಾಧನೆ ಮಾಡಲಿದ್ದು, ಐದು ಗ್ರಾಮ ಪಂಚಾಯಿತಿ ಹಾಗೂ ಎರಡು ಜಿಲ್ಲಾ ಪಂಚಾಯಿತಿ ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ಬಿಎಸ್‌ಪಿ ತುಮಕೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ವೆಂಕಟಾಪುರ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಅಭ್ಯರ್ಥಿ ಸುಧಾಕರ್ ಡಿ.ಎನ್. ವಿರೂಪಸಮುದ್ರ ತಿಳಿಸಿದರು.

ತಾಲೂಕಿನ ಕಸಬಾ ಹೋಬಳಿಯ ವೆಂಕಟಾಪುರದಲ್ಲಿ ಶನಿವಾರ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪಾವಗಡ ತಾಲೂಕಿನಲ್ಲಿ ಪಕ್ಷದ ಸಂಘಟನೆ ಬಲಗೊಳ್ಳುತ್ತಿದ್ದು, ಕಾರ್ಯಕರ್ತರ ಪರಿಶ್ರಮ ಹಾಗೂ ಸ್ಥಳೀಯ ಜನರ ಬೆಂಬಲದಿಂದ ಮುಂಬರುವ ಚುನಾವಣೆಯಲ್ಲಿ ಪಕ್ಷಕ್ಕೆ ಯಶಸ್ಸು ದೊರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಎಸ್‌ಪಿ ಪಕ್ಷವು ದಲಿತರು, ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರ ಹಕ್ಕುಗಳು ಮತ್ತು ಕಲ್ಯಾಣಕ್ಕಾಗಿ ನಿರಂತರವಾಗಿ ಹೋರಾಡುತ್ತಿದೆ. ಪಕ್ಷದ ಸಿದ್ಧಾಂತ, ಸಂಘಟನಾ ಚಟುವಟಿಕೆಗಳು ಹಾಗೂ ಜನಪರ ಕಾರ್ಯಗಳು ಚುನಾವಣೆಯಲ್ಲಿ ಪಕ್ಷಕ್ಕೆ ಬಲ ತುಂಬಲಿವೆ. ಜನರು ಬದಲಾವಣೆಯನ್ನು ಬಯಸುತ್ತಿದ್ದು, ಈ ಬಾರಿ ಬಿಎಸ್‌ಪಿ ಅಭ್ಯರ್ಥಿಗಳಿಗೆ ಉತ್ತಮ ಬೆಂಬಲ ದೊರೆಯುವ ನಿರೀಕ್ಷೆಯಿದೆ ಎಂದು ಹೇಳಿದರು.

ವೆಂಕಟಾಪುರ ಜಿಲ್ಲಾ ಪಂಚಾಯಿತಿ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ತಮಗೆ ಗೆಲುವಿನ ವಿಶ್ವಾಸವಿದೆ ಎಂದು ತಿಳಿಸಿದ ಸುಧಾಕರ್ ಡಿ.ಎನ್., ಪಕ್ಷದ ಕಾರ್ಯಕರ್ತರು ಗ್ರಾಮೀಣ ಪ್ರದೇಶಗಳಲ್ಲಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಮೂಲಕ ಚುನಾವಣೆಗೆ ಸಜ್ಜಾಗುತ್ತಿದ್ದಾರೆ ಎಂದರು.

ಬಿಎಸ್‌ಪಿ ತಾಲೂಕು ಅಧ್ಯಕ್ಷ ಲಕ್ಷ್ಮೀಕಾಂತ್ ದೊಮ್ಮತಮರಿ ಮಾತನಾಡಿ, ಕಳೆದ ಕೆಲವು ತಿಂಗಳುಗಳಿಂದ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಪಕ್ಷದ ಕಾರ್ಯಕರ್ತರು ಮನೆಮನೆಗೆ ತೆರಳಿ ಜನರನ್ನು ಸಂಪರ್ಕಿಸುತ್ತಿದ್ದಾರೆ. ಪಕ್ಷದ ವಿಚಾರಧಾರೆ ಹಾಗೂ ಜನಪರ ಉದ್ದೇಶಗಳನ್ನು ಜನರಿಗೆ ತಲುಪಿಸುವ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದರು.

ಮುಂಬರುವ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸುತ್ತಿದ್ದು, ಸಂಘಟಿತ ಪ್ರಯತ್ನಗಳ ಮೂಲಕ ಉತ್ತಮ ಫಲಿತಾಂಶ ಸಾಧಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು.

Related Post

Leave a Reply

Your email address will not be published. Required fields are marked *