Breaking
Wed. Oct 14th, 2026

ಬರ ಪರಿಹಾರಕ್ಕೆ ಕೇಂದ್ರದಿಂದ ₹7,000 ಕೋಟಿ ನೆರವಿಗೆ ರಾಜ್ಯ ಸರ್ಕಾರದ ಸಿದ್ಧತೆ: ಡಾ. ಜಿ. ಪರಮೇಶ್ವರ್

ಬೆಂಗಳೂರು: ರಾಜ್ಯದಲ್ಲಿ ಬರದಿಂದ ಉಂಟಾಗಿರುವ ನಷ್ಟದ ಕುರಿತು ಸಮಗ್ರ ವರದಿ ಸಿದ್ಧಪಡಿಸಿ, ಕೇಂದ್ರ ಸರ್ಕಾರದಿಂದ ಪರಿಹಾರ ಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಬಳಿ ಬುಧವಾರ ಮಾತನಾಡಿದ ಅವರು, ಏಳು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲು ಸರ್ಕಾರ ನಿರ್ಧರಿಸಿದ್ದು, ಉಳಿದ ತಾಲೂಕುಗಳಲ್ಲಿನ ಪರಿಸ್ಥಿತಿಯ ಪರಿಶೀಲನೆಗಾಗಿ ಗ್ರೌಂಡ್‌ ಟ್ರೂಥಿಂಗ್‌ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಹೇಳಿದರು.

ಇನ್ನೊಂದು ವಾರದೊಳಗೆ ಅಂತಿಮ ಮೆಮೊರಾಂಡಮ್‌ ಸಿದ್ಧವಾಗಲಿದೆ. ಇದರಿಂದ ರಾಜ್ಯದಲ್ಲಿ ಬರದಿಂದ ಉಂಟಾಗಿರುವ ಒಟ್ಟು ನಷ್ಟದ ಅಂದಾಜು ಲಭ್ಯವಾಗಲಿದೆ. ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ನಿಧಿ (NDRF) ಮಾರ್ಗಸೂಚಿಗಳ ಪ್ರಕಾರ ರಾಜ್ಯಕ್ಕೆ ಎಷ್ಟು ಪರಿಹಾರ ಕೇಳಬಹುದು ಎಂಬುದನ್ನು ಪರಿಶೀಲಿಸಿ, ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ತಾವು ಹಾಗೂ ಇತರ ಸದಸ್ಯರು ದೆಹಲಿಗೆ ತೆರಳಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ. ರಾಜ್ಯವು ಈ ಹಿಂದೆ ಸುಮಾರು ₹7,000 ಕೋಟಿ ಪರಿಹಾರ ನೀಡುವಂತೆ ಕೋರಿತ್ತು. ಕಳೆದ ವರ್ಷ ₹18,000 ಕೋಟಿ ನೆರವು ಕೇಳಲಾಗಿತ್ತು ಎಂದು ವಿವರಿಸಿದರು.

ಈ ಬಾರಿ 226 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಕಳೆದ ವರ್ಷಕ್ಕಿಂತ ಹೆಚ್ಚಿನ ನಷ್ಟವಾಗಿರುವುದು ಕಂಡುಬರುತ್ತಿದೆ. NDRF ಮಾರ್ಗಸೂಚಿಗಳನ್ನು ಕೆಲವು ಮಟ್ಟಿಗೆ ಸಡಿಲಗೊಳಿಸುವಂತೆ ಮುಖ್ಯಮಂತ್ರಿ ಹಾಗೂ ತಾವು ಕೇಂದ್ರಕ್ಕೆ ಪತ್ರ ಬರೆದಿದ್ದೆವು. ಇದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಕೃಷಿ ಸಚಿವರು, ಮನವಿಯನ್ನು ಪರಿಶೀಲಿಸುವುದಾಗಿ ತಿಳಿಸಿದ್ದಾರೆ ಎಂದರು.

ಮೀಸಲಾತಿ ವಿಚಾರವೂ ಸಚಿವ ಸಂಪುಟದಲ್ಲಿ ಚರ್ಚೆ

ಮೀಸಲಾತಿ ವಿಚಾರವಾಗಿ ಸರ್ವಪಕ್ಷ ನಿಯೋಗವನ್ನು ದೆಹಲಿಗೆ ಕರೆದೊಯ್ಯುವ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್, ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯ ಚರ್ಚೆಯಾಗಲಿದೆ ಎಂದರು. ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಬೇಕೇ ಅಥವಾ ಮೀಸಲಾತಿಯನ್ನು ಸಂವಿಧಾನದ ಒಂಬತ್ತನೇ ಅನುಸೂಚಿಗೆ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಬೇಕೇ ಎಂಬ ಬಗ್ಗೆ ಸಂಪುಟದಲ್ಲಿ ಚರ್ಚಿಸಿ ನಿರ್ಧಾರ ಕೈಗೊಂಡ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Related Post

Leave a Reply

Your email address will not be published. Required fields are marked *