Breaking
Fri. Sep 4th, 2026

ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕಳಪೆ ಆಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ

ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ; ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಮುಖಂಡರು

ಮಾನವಿ: ಪಟ್ಟಣದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕಲುಷಿತ ಹಾಗೂ ಕಳಪೆ ಗುಣಮಟ್ಟದ ಆಹಾರ ಸೇವಿಸಿದ ಬಳಿಕ ಹಲವಾರು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ಅಸ್ವಸ್ಥ ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ ವಾರವಷ್ಟೇ ಜೈ ಭೀಮ್ ಯುವ ಕ್ರಾಂತಿ ಸೇನೆಯ ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್ ಸೇರಿದಂತೆ ಸಾಮಾಜಿಕ ಕಾರ್ಯಕರ್ತರು ಹಾಗೂ ವರದಿಗಾರರ ತಂಡ ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು. ಈ ವೇಳೆ ಶಾಲೆಯಲ್ಲಿ ಕಂಡುಬಂದ ಮೂಲಭೂತ ಸೌಕರ್ಯಗಳ ಕೊರತೆ ಹಾಗೂ ಆಹಾರದ ಗುಣಮಟ್ಟದ ಕುರಿತು ಪ್ರಾಂಶುಪಾಲರ ಅನುಪಸ್ಥಿತಿಯಲ್ಲಿ ಶಾಲೆಯ ಮೇಲ್ವಿಚಾರಕರ ಗಮನಕ್ಕೆ ತರಲಾಗಿತ್ತು. ಸಮಸ್ಯೆಗಳನ್ನು ತಕ್ಷಣ ಸರಿಪಡಿಸುವಂತೆ ಎಚ್ಚರಿಕೆಯನ್ನೂ ನೀಡಲಾಗಿತ್ತು ಎಂದು ಸಂಘಟನೆಯ ಮುಖಂಡರು ತಿಳಿಸಿದ್ದಾರೆ.

ಆದರೆ, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳದ ಪರಿಣಾಮ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ ಎಂದು ಆರೋಪಿಸಿರುವ ಸಾಮಾಜಿಕ ಹೋರಾಟಗಾರರು, ಘಟನೆಗೆ ಸಂಬಂಧಿಸಿದಂತೆ ಜವಾಬ್ದಾರಿಯುತ ಅಧಿಕಾರಿಗಳು ಹಾಗೂ ಸಿಬ್ಬಂದಿಯ ವಿರುದ್ಧ ತನಿಖೆ ನಡೆಸಿ, ತಪ್ಪಿತಸ್ಥರು ಕಂಡುಬಂದಲ್ಲಿ ಕಠಿಣ ಕಾನೂನು ಹಾಗೂ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಸುದ್ದಿ ತಿಳಿಯುತ್ತಿದ್ದಂತೆಯೇ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸ್ಥಳೀಯ ನಾಯಕರು ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳ ಆರೋಗ್ಯ ವಿಚಾರಿಸಿದರು. ವೈದ್ಯರಿಂದ ಚಿಕಿತ್ಸೆಯ ಮಾಹಿತಿ ಪಡೆದು, ವಿದ್ಯಾರ್ಥಿಗಳಿಗೆ ಅಗತ್ಯ ಹಾಗೂ ತುರ್ತು ವೈದ್ಯಕೀಯ ಸೇವೆ ಒದಗಿಸುವಂತೆ ಮನವಿ ಮಾಡಿದರು.

ಘಟನೆಗೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ನಡೆಸುವುದಾಗಿ ಸಂಘಟನೆಗಳ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

Related Post

Leave a Reply

Your email address will not be published. Required fields are marked *