ಪಾವಗಡ: ಪಟ್ಟಣದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯ ಮಹತ್ವವನ್ನು ಸಾರಲಾಯಿತು.
ಈ ಬಾರಿಯ ರಾಜ್ಯೋತ್ಸವದಲ್ಲಿ SSLC ಮತ್ತು PUC ಪರೀಕ್ಷೆಗಳಲ್ಲಿ ಕನ್ನಡ ಭಾಷಾ ವಿಷಯದಲ್ಲಿ 100ಕ್ಕೆ 100 ಅಂಕ ಗಳಿಸಿದ ತಾಲೂಕಿನ 40 ಪ್ರತಿಭಾವಂತ ವಿದ್ಯಾರ್ಥಿಗಳನ್ನು ವೇದಿಕೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷೆಯ ಬಗ್ಗೆ ಅಭಿಮಾನ ಮತ್ತು ಆಸಕ್ತಿ ಬೆಳೆಸುವುದರ ಜೊತೆಗೆ ಕನ್ನಡದಲ್ಲಿ ಅತ್ಯುತ್ತಮ ಸಾಧನೆ ಮಾಡಲು ಪ್ರೋತ್ಸಾಹಿಸುವ ಉದ್ದೇಶದಿಂದ ಈ ವಿಶೇಷ ಗೌರವ ಸಮರ್ಪಿಸಲಾಯಿತು.
ಇದೇ ಸಂದರ್ಭದಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಕನ್ನಡ ನಾಡು, ನುಡಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಬಿಂಬಿಸುವ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು. ವಿದ್ಯಾರ್ಥಿಗಳ ಕಲಾ ಪ್ರತಿಭೆಯನ್ನು ಮೆಚ್ಚಿದ ಆಯೋಜಕರು ಪ್ರತಿಯೊಂದು ತಂಡಕ್ಕೂ 5 ಸಾವಿರ ರೂ. ಗೌರವಧನ ನೀಡಿ ಪ್ರೋತ್ಸಾಹಿಸಿದರು.
ತಾಲೂಕಿನ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 19 ಸಾಧಕರನ್ನು ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಾಹಿತ್ಯ ಕ್ಷೇತ್ರದಲ್ಲಿ ಎಚ್. ಎರಿಸ್ವಾಮಿ, ವೈದ್ಯಕೀಯ ಕ್ಷೇತ್ರದಲ್ಲಿ ಜಿ.ಕೆ. ಈರಪ್ಪ, ಕ್ರೀಡಾ ಕ್ಷೇತ್ರದಲ್ಲಿ ಪಿ.ಎಸ್. ಪಾವನಿ, ಸಮಾಜ ಸೇವೆಯಲ್ಲಿ ಎಚ್. ರಾಮಚಂದ್ರಯ್ಯ, ಯೊನಸ್ ಮತ್ತು ಹೆಲ್ಪ್ ಸೊಸೈಟಿ ಸೇವಾ ಟ್ರಸ್ಟ್, ಪತ್ರಿಕೋದ್ಯಮದಲ್ಲಿ ಎಂ. ಶ್ರೀನಿವಾಸಲು ಹಾಗೂ ಟಿ.ಎನ್. ಬೆಟ್ಟದ ರಾಜ್ ಕುಮಾರ್ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು. ಉಳಿದಂತೆ ಛಾಯಾಗ್ರಹಣ, ರಂಗಭೂಮಿ, ಜನಪದ, ಬಯಲಾಟ, ಸಂಗೀತ ಹಾಗೂ ಪೌರಕಾರ್ಮಿಕ ಕ್ಷೇತ್ರದ ಸಾಧಕರಿಗೂ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ವೈ. ರವಿ, ತಾಪಂ ಇಒ ಮಧುಸೂದನ್, ಕ್ಷೇತ್ರ ಶಿಕ್ಷಣಾಧಿಕಾರಿ ರೇಣುಕಮ್ಮ, ಪುರಸಭೆ ಮುಖ್ಯಾಧಿಕಾರಿ ಜಾಫರ್ ಷರೀಫ್, ಸುದೇಶ್ ಬಾಬು, ಶಂಕರ್ ರೆಡ್ಡಿ, ಎನ್. ರವಿ, ಕಟ್ಟಾ ನರಸಿಂಹ, ಪ್ರಧಾನ ಭಾಷಣಕಾರ ಎಂ.ಜಿ. ಸಿದ್ದರಾಮಯ್ಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಕನ್ನಡಪರ ಹಾಗೂ ದಲಿತ ಸಂಘಟನೆಗಳ ಮುಖಂಡರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಗೌರವ, ಸ್ಥಳೀಯ ಪ್ರತಿಭೆಗಳಿಗೆ ಪ್ರೋತ್ಸಾಹ ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನದ ಮೂಲಕ ಕನ್ನಡ ರಾಜ್ಯೋತ್ಸವ ಅರ್ಥಪೂರ್ಣವಾಗಿ ನಡೆಯಿತು.

